ಜಿಲ್ಲಾ ಪಂಚಾಯತ ಹಾಗೂ ತಾಲೂಕಾ ಪಂಚಾಯತಗಳಿಗೆ ಚುನಾವಣೆಗಳನ್ನು ನಡೆಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬಹುತೇಕ ಲೋಕಸಭಾ ಚುನಾವಣೆಗೂ ಮುನ್ನ ಜಿಲ್ಲಾ ಪಂಚಾಯತ ಚುನಾವಣೆ ಮಾಡಲು ಸರ್ಕಾರ ಉತ್ಸುಕತೆ ಹೊಂದಿದೆ ಎನ್ನಲಾಗಿದೆ.
ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬಂದಿದೆ ಅನ್ನೋ ಮಾಹಿತಿ ಮೇರೆಗೆ ಬೇಗನೆ ಚುನಾವಣೆ ನಡೆಸಿದರೆ ಉತ್ತಮ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣಾಭಿವೃದ್ದಿ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು. ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯತ ಕ್ಷೇತ್ರ ವಿಂಗಡಣೆ ಕುರಿತಂತೆಯೂ ಸಹ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆ ಸಭೆಯಲ್ಲಿದ್ದರು.