ರಾಜ್ಯ ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಇಂದು ವಿದ್ಯುಕ್ತ ಚಾಲನೆ ಸಿಗಲಿದೆ. ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಸೇರಿದಂತೆ ರಾಜ್ಯದಲ್ಲಿ ಸುಮಾರು 10500 ಕಡೆಗೆ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. 1.13 ಕೋಟಿ ಮಹಿಳೆಯರು ಈ ಯೋಜನೆಯಡಿ ಹಣ ಪಡೆಯಲಿದ್ದಾರೆ. ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಪ್ರತಿ ವರ್ಷ 32 ಸಾವಿರ ಕೋಟಿ ಹಣ ಬೇಕಾಗಬಹುದೆಂದು ಅಂದಾಜಿಸಲಾಗಿದೆ.
ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿಯಂತೆ, ಈ ತಿಂಗಳು ಒಟ್ಟು 2175 ಕೋಟಿ ಹಣ ಮನೆಯ ಯಜಮಾನಿಯರ ಖಾತೆಗೆ ಇಂದು ಜಮಾ ಆಗಲಿದೆ. ಬಹು ನೀರಿಕ್ಷಿತ ಕಾರ್ಯಕ್ರಮದ ಯಶಸ್ವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಟೊಂಕ ಕಟ್ಟಿ ನಿಂತಿದ್ದು, ಇಡೀ ಸರ್ಕಾರ ಮೈಸೂರಿನಲ್ಲಿ ಬೀಡು ಬಿಟ್ಟಿದೆ.
