ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಭದ್ರಕೋಟೆ ಎನಿಸಿರುವ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೇಸ್ ಇಂದು ಬಹಿರಂಗ ಸಭೆ ನಡೆಸಿತು.
ಬೆಂಗೇರಿಯ ಸಂತೆ ಮೈದಾನದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸಚಿವ ಸಂತೋಷ ಲಾಡ್, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇವಲ ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ದೇಶದ ಆರ್ಥಿಕತೆ ಬಗ್ಗೆ ಮಾತನಾಡುವ ಬಿಜೆಪಿಗರು ಬಡವರ ಬದುಕಿಗೆ ಭಾರ ಹಾಕಿದ್ದಾರೆ. ಕಳೆದ 10 ವರ್ಷಗಳಲ್ಲಿ ದೇಶದ ಸಾಲ ಯಾಕೆ, ಹೇಗೆ ಹೆಚ್ಚಾಯಿತು ಅನ್ನೋದರ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ಕುಟುಕಿದರು.
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚಿಸಿದ ಸಚಿವ ಸಂತೋಷ ಲಾಡ್, ಬಿಜೆಪಿ ಕೇವಲ ಭಾವನಾತ್ಮಕ ವಿಷಯ ಮುಂದಿಟ್ಟುಕೊಂಡು ಚುನಾವಣೆ ನಡೆಸುತ್ತದೆ. ಹಾಗಾಗಿ ಈ ಸಲ ಯಾರು ಮರಳಾಗಬಾರದು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಪಕ್ಷದೊಳಗಿನ ಆಂತರಿಕ ಗುಂಪುಗಾರಿಕೆಯಲ್ಲಿ ಮುಳುಗಿದ್ದ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.