1996 ರಿಂದ ಬಿಜೆಪಿ ಪಾಲಾಗಿರುವ ಧಾರವಾಡ ಲೋಕಸಭಾ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ಹಾಕಿಕೊಳ್ಳಬೇಕೆಂದು ನಿರ್ಧರಿಸಿರುವ ಕಾಂಗ್ರೇಸ್ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಈ ಸಲ ಧಾರವಾಡ ಜಿಲ್ಲೆಯ ಕಾಂಗ್ರೇಸ್ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಪಕ್ಷದೊಳಗಿನ ಆಂತರಿಕ ಕಚ್ಚಾಟಕ್ಕೆ ಬ್ರೇಕ್ ಹಾಕಿದ್ದಾರೆ.
ನಾಲ್ಕೈದು ಗುಂಪುಗಳಲ್ಲಿ ಹರಿದು ಹಂಚಿ ಹೋಗಿದ್ದ ಕಾಂಗ್ರೇಸ್ ನಾಯಕರು, ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಗೆಲುವಿಗೆ ಶ್ರಮ ಹಾಕುತ್ತಿದ್ದಾರೆ. ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ನಾಲ್ವರು ಕಾಂಗ್ರೇಸ್ ಶಾಸಕರಿದ್ದು, ನಾಲ್ವರು ಸಹ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
# ಪ್ರತಿ ವಿಧಾನಸಭಾ ಕ್ಷೇತ್ರಗಳ ಮೇಲೆ ಕೆಪಿಸಿಸಿ ಹದ್ದಿನ ಕಣ್ಣು #
ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಕೆ ಪಿ ಸಿ ಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಪ್ರತಿ ವಿಧಾನಸಭಾ ಕ್ಷೇತ್ರಗಳ ಮೇಲೆ ನಿಗಾ ವಹಿಸಿದ್ದಾರೆ. ಅಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳು, ಪಕ್ಷದ ಮುಖಂಡರ ಕಾರ್ಯ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಇಂದ ನೇಮಕಗೊಂಡ ತಂಡ, ಕ್ಷೇತ್ರದಿಂದ ಮಾಹಿತಿ ಸಂಗ್ರಹಿಸಿ, ನಿರಂತರವಾಗಿ ಕೇಂದ್ರ ಕಚೇರಿಗೆ ಮಾಹಿತಿ ರವಾನೆ ಮಾಡಲಿದೆ. ಆಯಾ ಕ್ಷೇತ್ರದ ಮುಖಂಡರಿಗೆ ಈಗಾಗಲೇ ಜವಾಬ್ದಾರಿಯನ್ನು ವಹಿಸಿಕೊಡಲಾಗಿದ್ದು, ಬೂತ್ ಮಟ್ಟದಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಗಳಾಗಿ ಸಚಿವ ದಿನೇಶ ಗುಂಡೂರಾವರನ್ನು ನೇಮಕ ಮಾಡಲಾಗಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೇರಿದಂತೆ ಜಿಲ್ಲೆಯ ಕಾಂಗ್ರೇಸ್ ಶಾಸಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.