ಮೀಟರ್ ಬಡ್ಡಿ ಹಾವಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಗೆ ಪತ್ರಗಳು ಬರುತ್ತಿದ್ದು, ಮೀಟರ್ ಬಡ್ಡಿ ದಂಧೆಕೋರರನ್ನು ಮಟ್ಟ ಹಾಕಲು ಮುಖ್ಯಮಂತ್ರಿ ಕಚೇರಿ ಮುಂದಾಗಿದೆ.
ಹಾವೇರಿ ಜಿಲ್ಲೆಯಲ್ಲಿನ ಮೀಟರ್ ಬಡ್ಡಿ ದಂಧೆಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಹಾವೇರಿ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು, ಪ್ರಭಾವಿಗಳು ಹಾಗೂ ಅವರ ಬೆಂಬಲಿಗರ ಪಡೆ ಸೇರಿ ರಾಜಾರೋಷವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಪತ್ರ ಬರೆಯಲಾಗಿದೆ.
ಹಣಕಾಸಿನ ತುರ್ತು ಅಗತ್ಯಕ್ಕಾಗಿ, ಸಾಲ ಪಡೆಯುವ ಬೀದಿ ಬದಿಯ ವ್ಯಾಪಾರಿಗಳು, ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದಿರುವವರು ದಂಧೆಕೋರರ ಸುಳಿಯಲ್ಲಿ ಸಿಲುಕಿ ಕಣ್ಣೀರಿಡುವಂತಾಗಿದೆ ಎಂಬುದಾಗಿ ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗಿದೆ.
ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ ಅಧಿಕ್ಷಕರು ಹೇಳಿದ್ದಾರೆ.
ಇನ್ನು ಮುಂದೆಯೂ ಇಂತಹ ಪ್ರಕರಣ ಕಂಡುಬಂದಲ್ಲಿ ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸ್ಥಳೀಯವಾಗಿ ಏನೇ ಸಮಸ್ಯೆ ಎದುರಿಸುತ್ತಿದ್ದರು, ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ತರುವಂತೆ ಕೋರಲಾಗಿದೆ.