ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮೇಲೆ ಜ್ವಾಲಾಮುಖಿಯಂತೆ ಮುಗಿಬಿದ್ದಿದ್ದ ಜೆಡಿಎಸ್, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಬೆಳವಣಿಗೆ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ದಾ, ಕೇಂದ್ರ ಗೃಹ ಸಚಿವ ಅಮಿತ ಷಾ ರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ಎನ್ ಡಿ ಎ ಬೆಂಬಲಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದರು. ಇದಕ್ಕೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದ ಕುಮಾರಸ್ವಾಮಿ, ಕರ್ನಾಟಕದ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದರು. ಕುಟುಂಬ ರಾಜಕಾರಣದ ಬಗ್ಗೆ ಜೆಡಿಎಸ್ ನಾಯಕರನ್ನು ಕುಟುಕಿದ್ದ ಬಿಜೆಪಿ ನಾಯಕರು ಇದೀಗ ಜೆಡಿಎಸ್ ನಾಯಕರನ್ನು ಅಪ್ಪಿಕೊಳ್ಳಬೇಕಾಗಿದೆ.
ಎನ್ ಡಿ ಎ ಭಾಗವಾಗಿರುವ ಜೆಡಿಎಸ್ ಪಕ್ಷದ ನಾಯಕರ ನಡೆಯನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಎಚ್ ಡಿ ರೇವಣ್ಣ ಅವರಿಗೆ ಸ್ವಾಗತ ಕೋರಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮಾರ್ಗದರ್ಶನ ಮತ್ತು ಆಶೀರ್ವಾದ ದೊರಕುತ್ತದೆ ಎಂದು ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.