ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿದ್ದ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿ ಸಲ್ಲಿಕೆಯಾದ ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು, ಕರ್ನಾಟಕ ಹೈಕೋರ್ಟ ಶುಕ್ರವಾರ ಮಧ್ಯಾಹ್ನ ಪ್ರಕಟಿಸಲಿದೆ.
ಪರೀಕ್ಷಾ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಾಹ್ನ 1.25ಕ್ಕೆ ಪ್ರಕಟಿಸಲಿದೆ.
ಕೋಲಾರದ ಚಂದನ್ ಎನ್ ವಿ ಸೇರಿದಂತೆ ನೂರಾರು ಅಭ್ಯರ್ಥಿಗಳು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಸುದೀರ್ಘವಾಗಿ ನ್ಯಾಯಾಲಯ ನಡೆಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಲಿದ್ದು, ಎಲ್ಲರ ಚಿತ್ತ ಹೈಕೋರ್ಟನತ್ತ ನೆಟ್ಟಿದೆ.