ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆಯಿಂದ ನಡೆದ ಜನತಾ ದರ್ಶನದಲ್ಲಿ ಪಾಲ್ಗೊಂಡು, ಜನರ ಅಹವಾಲುಗಳನ್ನು ಆಲಿಸಿ, ಸ್ಪಂಧಿಸಿದರು. ಜನಸ್ಪಂಧನ ನಡೆಸುವಂತೆ ಎಲ್ಲ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ, ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಬೇಕೆಂದು ತಿಳಿಸಿದ್ದೆ. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದೆ. ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಇದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಅಸಮಾಧಾನ ಹೊರಹಾಕಿದರು.
ಜನತಾ ಸ್ಪಂದನ- ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗೋದಿಲ್ಲ, ಸಮಯ ಬೇಕಾಗುತ್ತದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ಬೆಳೆಯುತ್ತಲೇ ಹೋಗುತ್ತವೆ.
ಇಂದು ಬಂದ ಅರ್ಜಿಗಳಲ್ಲಿ ಬಹುತೇಕವಾಗಿ ಕಂದಾಯ, ಪೊಲೀಸ್ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, ವಸತಿ ಕೊಡಿ, ಉದ್ಯೋಗ ಕೊಡಿಸಿ ಎಂಬ ಮನವಿಗಳು ಬಂದಿವೆ. ವಿಶೇಷವಾಗಿ ಅಂಗವಿಕಲರು ಉದ್ಯೋಗ ಕೊಡಿಸಿ, ತ್ರಿಚಕ್ರ ವಾಹನ ಕೊಡಿಸಿ ಎಂದು ಮನವಿ ಸಲ್ಲಿಸಿದ್ದಾರೆ. 4,000 ತ್ರಿಚಕ್ರ ವಾಹನ ಒದಗಿಸಲಾಗಿದೆ ಎಂದರು. ಇಂದು ನಡೆದ ಜನತಾ ದರ್ಶನದಲ್ಲಿ ಒಟ್ಟು 3500 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರರು ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದು ತಾಕಿತು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಅಧಿಕಾರಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು.
